ಶಿವಮೊಗ್ಗ: ಪಿಎಂ ಇ-ಬಸ್ ಸೇವಾ ಯೋಜನೆಯಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿರುವ 50 ಎಲೆಕ್ಟ್ರಿಕ್ ಬಸ್‌ಗಳನ್ನು ಶೀಘ್ರ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ ಅವರು ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ.
ಸಚಿವರನ್ನು ಖುದ್ದಾಗಿ ಭೇಟಿಯಾದ ಚೇತನ್ ಕೆ. ಗೌಡ ಅವರು, ಶಿವಮೊಗ್ಗ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿರುವ ಸಾರ್ವಜನಿಕ ಸಾರಿಗೆ ಬೇಡಿಕೆ, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಉದ್ಯೋಗಿಗಳ ಸಂಚಾರದ ಒತ್ತಡದ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ಶಕ್ತಿ ಯೋಜನೆ ಜಾರಿಯಾದ ಬಳಿಕ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಬೇಡಿಕೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಮಂಜೂರಾಗಿರುವ 50 ಇ-ಬಸ್‌ಗಳನ್ನು ಶೀಘ್ರ ರಸ್ತೆಗಿಳಿಸುವುದು ಅಗತ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಪರಿಸರ ಸ್ನೇಹಿ ಹಸಿರು ಸಾರಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇ-ಬಸ್‌ಗಳ ಕಾರ್ಯಾಚರಣೆಗೆ ಅಗತ್ಯವಿರುವ ಅತ್ಯಾಧುನಿಕ ಇ-ಚಾರ್ಜಿಂಗ್ ಮೂಲಸೌಕರ್ಯವನ್ನೂ ಶಿವಮೊಗ್ಗ ನಗರದಲ್ಲಿ ತ್ವರಿತವಾಗಿ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿದ ಸಾರಿಗೆ ಸಚಿವರು ವಿಷಯದ ಗಂಭೀರತೆಯನ್ನು ಪರಿಗಣಿಸಿ ಶೀಘ್ರ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರು ಹಾಗೂ ಹೆಬ್ಬಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ವಿ. ಬಾಲಾಜಿ ಮತ್ತು ಶ್ರೀಜಿತ್ ಉಪಸ್ಥಿತರಿದ್ದರು.
