ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಗುರುವಾರ ತೀವ್ರಗೊಂಡಿತು.
ನಗರದ ಡಿಸಿ ಕಚೇರಿ ಆವರಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ ನೇತೃತ್ವದಲ್ಲಿ ಧರಣಿ ನಡೆಯುತ್ತಿತ್ತು. ಈ ವೇಳೆ ಪ್ರತಿಭಟನಾಕಾರರು ಏಕಾಏಕಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಬ್ಯಾರಿಕೇಡ್ಗಳನ್ನು ತಳ್ಳಿ ಒಳನುಗ್ಗಲು ಯತ್ನಿಸಿದಾಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆಯಿತು.
ಘಟನೆಯಲ್ಲಿ ಕೆಲ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರು ಕೆಳಗೆ ಬಿದ್ದಿದ್ದು, ಸ್ಥಳದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನೂಕುನುಗ್ಗಲಿನಲ್ಲಿ ಚಪ್ಪಲಿಗಳು ಚೆಲ್ಲಾಪಿಲ್ಲಿಯಾದವು. ಇದೇ ವೇಳೆ ಸಚಿವ ನಾಗೇಂದ್ರ ಅವರ ಭಾವಚಿತ್ರವನ್ನು ತುಳಿದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಡಿಸಿ ಕಚೇರಿ ಬಾಗಿಲಿನ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು, ಕೆಲವರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು. ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದರು.
ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ ಪ್ರಮುಖರು ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
