ಜನ ನೋಟ
ಶಿವಮೊಗ್ಗ

ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಗುಣಮಟ್ಟದ ಶಿಕ್ಷಣ : ರಾಜ್ಯದಲ್ಲಿ 1,000 ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ – ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯದ ಮಕ್ಕಳಿಗೆ ಒಂದೇ ಆವರಣದಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯಾದ್ಯಂತ 1,000 ಸುಸಜ್ಜಿತ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹಂತ ಹಂತವಾಗಿ ಸ್ಥಾಪಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ನಗರದ ಬಿ.ಎಚ್. ರಸ್ತೆಯ ಸೈನ್ಸ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಎಜಾಕ್ಸ್ ಎಂಜಿನಿಯರಿಂಗ್ ಲಿಮಿಟೆಡ್ ಮತ್ತು ಎಜಾಕ್ಸ್ ಎಂಜಿನಿಯರಿಂಗ್ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಸಿಎಸ್‌ಆರ್ ನಿಧಿಯಡಿ ನಿರ್ಮಿಸಲಾಗುತ್ತಿರುವ ಎಜಾಕ್ಸ್ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಸ್ಮಾರ್ಟ್ ತರಗತಿಗಳು, ಆಧುನಿಕ ಮೂಲಸೌಕರ್ಯ ಹಾಗೂ ಸಮಗ್ರ ಶೈಕ್ಷಣಿಕ ಸೌಲಭ್ಯಗಳನ್ನು ಒಳಗೊಂಡ ಶಾಲೆಗಳನ್ನು ನಿರ್ಮಿಸುವ ಮೂಲಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಗುರಿ ಹೊಂದಲಾಗಿದೆ ಎಂದರು.

ಮುಂದಿನ ಎರಡು ವರ್ಷಗಳಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಿ ಲೋಕಾರ್ಪಣೆಗೊಳಿಸುವ ಉದ್ದೇಶವಿದೆ. ರಾಜ್ಯಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಉದ್ಘಾಟನೆ ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮವನ್ನು ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಆಯೋಜಿಸಲಾಗುವುದು ಎಂದು ಸಚಿವರು ತಿಳಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನೆರವಿನೊಂದಿಗೆ ಉರ್ದು ಸೇರಿದಂತೆ ದ್ವಿಭಾಷಾ ಶಿಕ್ಷಣ ನೀಡುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನೂ ಆರಂಭಿಸುವ ಉದ್ದೇಶವಿದೆ. ಕಟ್ಟಡ ನಿರ್ಮಾಣ ಪೂರ್ಣಗೊಂಡ ಬಳಿಕ ಶಾಲೆಗಳ ನಿರ್ವಹಣೆಯನ್ನು ಶಿಕ್ಷಣ ಇಲಾಖೆಯೇ ವಹಿಸಿಕೊಳ್ಳಲಿದೆ ಎಂದು ಹೇಳಿದರು.

ಶಿಕ್ಷಣ ಇಲಾಖೆಗೆ 75 ಸಾವಿರ ಶಿಕ್ಷಕರ ಅಗತ್ಯ

ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ದ್ವಿಭಾಷಾ ಕಲಿಕೆಯ ಜೊತೆಗೆ ಎಲ್ಲಾ ವಿಷಯಗಳ ಶಿಕ್ಷಕರು, ದೈಹಿಕ ಶಿಕ್ಷಣ, ಸಂಗೀತ, ಗಣಕಯಂತ್ರ ಸೇರಿದಂತೆ ಅಗತ್ಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲಾಗುವುದು. ಶಿಕ್ಷಣ ಇಲಾಖೆಯಲ್ಲಿ ಇನ್ನೂ ಸುಮಾರು 75 ಸಾವಿರ ಶಿಕ್ಷಕರ ಅಗತ್ಯವಿದ್ದು, ಈಗಾಗಲೇ 15 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಶಕ್ತಿ ತುಂಬುವ ಇಂತಹ ಕಾರ್ಯಗಳು ಅತ್ಯಂತ ಮಹತ್ವದ್ದಾಗಿದ್ದು, ಉದ್ದೇಶಿತ ಶಾಲಾ ಕಟ್ಟಡ ಕಾಮಗಾರಿ ತ್ವರಿತವಾಗಿ ಪೂರ್ಣಗೊಂಡು ಶೀಘ್ರ ಲೋಕಾರ್ಪಣೆಯಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಎಜಾಕ್ಸ್ ಸಂಸ್ಥೆಯ ಅಧ್ಯಕ್ಷ ಕೆ. ವಿಜಯ್, ಶ್ರೀಮತಿ ಕಲ್ಯಾಣಿ ಕೆ. ವಿಜಯ್ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Related posts

ನೂತನ ಸಚಿವರಿಗೆ ಖಾತೆ ಹಂಚಿಕೆ ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

JanaNota Editor

ಹೊಲದಲ್ಲಿ ಹೂತಿಟ್ಟ ₹5 ಲಕ್ಷ ಹಣಕ್ಕೆ ಏನಾಯ್ತು ಗೊತ್ತಾ? ಗೆದ್ದಲುಗಳು ಮಾಡಿದ್ದೇನು ನೋಡಿ

JanaNota Editor

ಶಿವಮೊಗ್ಗ: ಹಣ ಕಡಿತ, ದೂರು ನಿರ್ಲಕ್ಷ್ಯ: ಯೂನಿಯನ್ ಬ್ಯಾಂಕ್‌ಗೆ ಬಡ್ಡಿ ಸಮೇತ ಪಾವತಿ ಆದೇಶ

JanaNota Editor