ಶಿವಮೊಗ್ಗ: ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕಟಿಸಿರುವ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿ ಅವರು ಆಯ್ಕೆಯಾಗಿದ್ದಾರೆ.
ದೇಶಾದ್ಯಂತ ಒಟ್ಟು 48 ಅತ್ಯುತ್ತಮ ಶಿಕ್ಷಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಶಿಕ್ಷಕ ಸಮುದಾಯಕ್ಕೆ ಇದು ಹೆಮ್ಮೆಯ ಕ್ಷಣವಾಗಿದೆ.
ರತ್ನಕುಮಾರಿ ಅವರು ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಅವರು ನೀಡುತ್ತಿರುವ ಕೊಡುಗೆಯನ್ನು ಗುರುತಿಸಿ ಈ ಪ್ರತಿಷ್ಠಿತ ರಾಷ್ಟ್ರೀಯ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆ ಅಂಗವಾಗಿ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರತ್ನಕುಮಾರಿ ಅವರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶಿಕ್ಷಣದ ಬೆಳಕು ಮೂಡಿಸುವ ಮೂಲಕ ನಿರಂತರವಾಗಿ ಶೈಕ್ಷಣಿಕ ಸೇವೆ ಸಲ್ಲಿಸುತ್ತಿರುವ ರತ್ನಕುಮಾರಿ ಅವರ ಸಾಧನೆಗೆ ಜಿಲ್ಲೆಯಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಅವರ ಈ ಸಾಧನೆ ರಾಜ್ಯದ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಿದ್ದು, ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ರಾಷ್ಟ್ರೀಯ ಮಟ್ಟದ ಹೆಮ್ಮೆ ತಂದಿದೆ.
