ಬೆಂಗಳೂರು, ಆಗಸ್ಟ್ 24: ರಾಜ್ಯದಲ್ಲಿ ಶಾಲಾ ಕಟ್ಟಡಗಳ ಅಭಿವೃದ್ಧಿ ಹಾಗೂ ಮಕ್ಕಳ ಸುರಕ್ಷತೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು ₹321.44 ಕೋಟಿ ವೆಚ್ಚದಲ್ಲಿ ದುರಸ್ತಿ ಮಾಡಲಾಗಿದೆ. ಇದೇ ಅವಧಿಯಲ್ಲಿ ₹1,252 ಕೋಟಿ ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಯಾವುದೇ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿರುವುದು ಕಂಡುಬಂದರೆ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಇಒ, ಡಿಡಿಪಿಐ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ಅಪಾಯಕಾರಿ ಸ್ಥಿತಿಯಲ್ಲಿರುವ ಶಾಲಾ ಕಟ್ಟಡಗಳ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಮಕ್ಕಳ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಶಾಲೆಗಳ ಕಟ್ಟಡಗಳ ಗುಣಮಟ್ಟದ ಕುರಿತು ನಿಗದಿತ ಅವಧಿಯಲ್ಲಿ ವರದಿ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಶಿಥಿಲ ಕಟ್ಟಡಗಳ ಕುರಿತು ತಕ್ಷಣ ಕ್ರಮ
ಕಲಬುರಗಿ ಜಿಲ್ಲೆಯ ಸಂಗೋಳಗಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ತಾರಸಿಯ ಗಾರೆ ಕುಸಿದಿರುವುದು ಹಾಗೂ ಕಲಬುರಗಿ ನಗರದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಚಾವಣಿ ಕುಸಿದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಪ್ರಕರಣದಲ್ಲಿ ತಪ್ಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಧು ಬಂಗಾರಪ್ಪ ಭರವಸೆ ನೀಡಿದರು.
59 ಶಾಲೆಗಳ ದುರಸ್ತಿ ಕಾರ್ಯ
2026-27ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 59 ಸರ್ಕಾರಿ ಶಾಲೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತಿದೆ. ₹121.07 ಕೋಟಿ ವೆಚ್ಚದಲ್ಲಿ 55 ತರಗತಿ ಕೊಠಡಿಗಳ ನಿರ್ಮಾಣ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.
ಸರ್ಕಾರಿ ಪಿಯು ಕಾಲೇಜುಗಳಿಗೂ ಮೂಲಸೌಕರ್ಯ
2024-25ನೇ ಸಾಲಿನಲ್ಲಿ 248 ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 978 ತರಗತಿ ಕೊಠಡಿಗಳ ದುರಸ್ತಿಗಾಗಿ ₹30.21 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಇದೇ ಸಾಲಿನಲ್ಲಿ 118 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ತಲಾ ಒಂದು ಸೇರಿದಂತೆ ಒಟ್ಟು 118 ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕೆ ₹10 ಕೋಟಿ ಬಿಡುಗಡೆ ಮಾಡಲಾಗಿದೆ.
2025-26ನೇ ಸಾಲಿನಲ್ಲಿ 117 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 266 ತರಗತಿ ಕೊಠಡಿಗಳ ನಿರ್ಮಾಣಕ್ಕೆ ₹75.98 ಕೋಟಿ, 96 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 267 ತರಗತಿ ಕೊಠಡಿಗಳ ದುರಸ್ತಿಗೆ ₹5.24 ಕೋಟಿ ಹಾಗೂ 67 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 123 ಶೌಚಾಲಯ ಬ್ಲಾಕ್‌ಗಳ ನಿರ್ಮಾಣಕ್ಕೆ ₹12.60 ಕೋಟಿ ಅನುದಾನ ಮಂಜೂರು ಮಾಡಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ವಿವರಿಸಿದರು.
