ಶಿವಮೊಗ್ಗ: ಜಿಲ್ಲೆಯಲ್ಲಿ ಅನಧಿಕೃತ ಕಸಾಯಿಖಾನೆಗಳು ನಡೆಯುತ್ತಿವೆ ಎಂಬ ಆರೋಪಗಳ ನಡುವೆಯೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಹಾಗೂ ಗೋರಕ್ಷಕರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇದೇ ವೇಳೆ ಹಿಂದೂ ಮುಖಂಡರು ಹಾಗೂ ಸಂಘಟನೆಗಳ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸುವ ಕ್ರಮವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಶಿಕಾರಿಪುರ ತಾಲೂಕಿನ ಕಾವಾಸಪುರ ಗ್ರಾಮ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಕ್ರಮ ಗೋಹತ್ಯೆ ಹಾಗೂ ಗೋಸಾಗಣೆ ನಡೆಯುತ್ತಿದೆ ಎಂಬ ಆರೋಪಗಳಿದ್ದರೂ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಶಿಕಾರಿಪುರ ನಗರ ಸೇರಿದಂತೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಅಗತ್ಯ ಪರವಾನಗಿ ಇಲ್ಲದೆ ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಆರೋಪಿಸಿದ ಅವರು, ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಯಬೇಕಾದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮ ಗೋಸಾಗಣೆ ಹಾಗೂ ಗೋಮಾಂಸ ಮಾರಾಟದ ಕುರಿತು ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳದ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಅಕ್ರಮ ಸಾಗಣೆಗೆ ಬಳಸುವ ವಾಹನಗಳನ್ನು ಜಪ್ತಿ ಮಾಡಬೇಕು. ದಾಳಿ ಸಂದರ್ಭದಲ್ಲಿ ಪತ್ತೆಯಾಗುವ ವಾಹನಗಳು, ವಧಾ ಸಾಮಗ್ರಿಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಹಿಂದೂ ಮುಖಂಡರು ಆಯೋಜಿಸುವ ಸಭೆ-ಸಮಾರಂಭಗಳಿಗೆ ಪದೇಪದೇ ನಿರ್ಬಂಧ ವಿಧಿಸುತ್ತಿರುವುದು ಸರಿಯಲ್ಲ. ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಆಗಮಿಸುವ ಮುಖಂಡರಿಗೂ ನಗರ ಪ್ರವೇಶಕ್ಕೆ ನಿರ್ಬಂಧ ಹೇರುವ ಕ್ರಮವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಹಿಂದೂ ಮುಖಂಡರ ಸಾಂವಿಧಾನಿಕ ಹಕ್ಕುಗಳಿಗೆ ನಿರ್ಬಂಧ ಹೇರುವ ಕ್ರಮ ಮುಂದುವರಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರಮೇಶ್ ಬಾಬು, ಆನಂದ್ ರಾವ್, ಸುರೇಶ್ ಬಾಬು, ಅಂಕುಶ್ ಸೇರಿದಂತೆ ವಿಹಿಂಪ ಮತ್ತು ಬಜರಂಗದಳದ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.
