ಶಿವಮೊಗ್ಗ: ತಂದೆ ಹಾಗೂ ಮಗಳು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ನೆಲ್ಲಿಬೀಡಿನಲ್ಲಿ ನಡೆದಿದೆ.
ಮಳೂರು ಗ್ರಾಮದ ಅರ್ಚನಾ ಜೈನ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಅವರ ತಂದೆ ನೀಲಕುಮಾರ್ ಜೈನ್ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರ್ಚನಾ ಜೈನ್ ಅವರು ಉಡುಪಿಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಅವರು, ರಜೆ ಮುಗಿದ ಬಳಿಕ ಉಡುಪಿಗೆ ಮರಳಬೇಕಿತ್ತು. ಈ ಹಿನ್ನೆಲೆಯಲ್ಲಿ ತಂದೆ ನೀಲಕುಮಾರ್ ಜೈನ್ ಅವರು ಮಗಳನ್ನು ಬಸ್ ನಿಲ್ದಾಣಕ್ಕೆ ಬಿಡಲು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.
ಈ ವೇಳೆ ಮರಳು ತುಂಬಿಕೊಂಡು ಸಾಗುತ್ತಿದ್ದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಮುಂಭಾಗ ನುಜ್ಜುಗುಜ್ಜಾಗಿದ್ದು, ಅರ್ಚನಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೀಲಕುಮಾರ್ ಜೈನ್ ಅವರು ಗಂಭೀರ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
