ಶಿವಮೊಗ್ಗ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಸಂಯೋಜಕರಾಗಿ ಸಿ.ಜಿ. ಮಧುಸೂದನ್ ಅವರನ್ನು ನೇಮಕ ಮಾಡಲಾಗಿದ್ದು, ಶಿವಮೊಗ್ಗ ಸೇರಿದಂತೆ ರಾಜ್ಯದ 11 ಜಿಲ್ಲೆಗಳ ಸಂಘಟನಾ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ನಿರ್ದೇಶನದಂತೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ ರಾಜ್ಯ ಸಂಯೋಜಕರ ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್ ಅವರು ಆಗಸ್ಟ್ 25, 2026ರಂದು ಈ ಕುರಿತು ಆದೇಶ ಹೊರಡಿಸಿದ್ದಾರೆ.
ರಾಜ್ಯ ಸಂಯೋಜಕರಾಗಿ ನಾಗೇಶ್ ಕರಿಯಪ್ಪ, ಸಿ.ಜಿ. ಮಧುಸೂದನ್ ಹಾಗೂ ಸಿದ್ದು ಹಾಲೇಗೌಡ ಅವರನ್ನು ನೇಮಕ ಮಾಡಲಾಗಿದೆ. ಈ ಪೈಕಿ ಸಿ.ಜಿ. ಮಧುಸೂದನ್ ಅವರಿಗೆ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.
ರಾಜ್ಯಾದ್ಯಂತ ‘ಭಾರತ ಜೋಡೋ ಯುವ ಸಂಘ’ಗಳನ್ನು ರಚಿಸುವುದು, ಯುವಕರ ನೋಂದಣಿ ಮಾಡಿಸುವುದು ಹಾಗೂ ವಹಿಸಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಸಂಘಟನಾ ಚಟುವಟಿಕೆಗಳನ್ನು ಚುರುಕುಗೊಳಿಸುವುದು ರಾಜ್ಯ ಸಂಯೋಜಕರ ಪ್ರಮುಖ ಜವಾಬ್ದಾರಿಗಳಾಗಿವೆ. ವಿವಿಧ ಜಿಲ್ಲೆಗಳಲ್ಲಿ ಯುವಕರನ್ನು ಸಂಘಟಿಸಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಇನ್ನು ನಾಗೇಶ್ ಕರಿಯಪ್ಪ ಅವರಿಗೆ ಮೈಸೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು ನಗರ, ತುಮಕೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪಶ್ಚಿಮ ಹಾಗೂ ಬೆಂಗಳೂರು ಕೇಂದ್ರದ ಜವಾಬ್ದಾರಿ ನೀಡಲಾಗಿದೆ.
ಸಿದ್ದು ಹಾಲೇಗೌಡ ಅವರಿಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ ಗ್ರಾಮಾಂತರ, ಬಳ್ಳಾರಿ ನಗರ, ವಿಜಯನಗರ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಹೊಣೆ ವಹಿಸಲಾಗಿದೆ.
ಸಂಘಟನೆಯಲ್ಲಿ ಸುದೀರ್ಘ ಅನುಭವ
ಸಿ.ಜಿ. ಮಧುಸೂದನ್ ಅವರು 2010ರಿಂದಲೇ ವಿದ್ಯಾರ್ಥಿ ಸಂಘಟನೆಯಾದ ಎನ್‌ಎಸ್‌ಯುಐನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನಾ ಕಾರ್ಯದಲ್ಲಿ ಗುರುತಿಸಿಕೊಂಡವರು. ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಅವರು, ಬಳಿಕ ಶಿವಮೊಗ್ಗ ಯೂತ್ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ವಿವಿಧ ಹುದ್ದೆಗಳಲ್ಲಿ ಸಂಘಟನಾ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಮಧುಸೂದನ್ ಅವರಿಗೆ ಇದೀಗ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಸಂಯೋಜಕ ಹುದ್ದೆ ನೀಡಿರುವುದು ಅವರ ಸಂಘಟನಾ ಸೇವೆಗೆ ದೊರೆತ ಮತ್ತೊಂದು ಮಹತ್ವದ ಜವಾಬ್ದಾರಿಯಾಗಿದೆ.
ಈ ನೇಮಕಾತಿ ಆದೇಶವನ್ನು ಸಂಬಂಧಪಟ್ಟ ಎಲ್ಲ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ರವಾನಿಸಲಾಗಿದೆ.
