ಮಂಡ್ಯ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಮೂರ್ಛೆಗೊಂಡು ಕುಸಿದುಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವೀರಮಣಿ (14) ಎಂದು ಗುರುತಿಸಲಾಗಿದೆ. ಎಂದಿನಂತೆ ಇತರ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ ವೀರಮಣಿ ಏಕಾಏಕಿ ಕುಸಿದುಬಿದ್ದಿದ್ದಾನೆ.
ತಕ್ಷಣ ಶಿಕ್ಷಕರು ಬಾಲಕನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಾಲಕನ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.
ವೈದ್ಯಕೀಯ ತಪಾಸಣೆಯ ಬಳಿಕ ತೀವ್ರ ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 14ರ ಹರೆಯದಲ್ಲೇ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿರುವುದು ಗ್ರಾಮಸ್ಥರು ಹಾಗೂ ಶಾಲಾ ಸಮುದಾಯದಲ್ಲಿ ಆಘಾತ ಮೂಡಿಸಿದೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
