ಶಿವಮೊಗ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಶಿವಮೊಗ್ಗ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಜಿಲ್ಲಾ ಕೇಂದ್ರದಲ್ಲಿ ಒಟ್ಟು 19 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 7,651 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ನಡೆಯಲಿದೆ.
ಪರೀಕ್ಷೆ ಸುಗಮವಾಗಿ ನಡೆಯಲು ಪ್ರಶ್ನೆಪತ್ರಿಕೆಗಳ ವಿತರಣೆಗಾಗಿ 6 ಮಾರ್ಗಗಳನ್ನು ರಚಿಸಲಾಗಿದ್ದು, ತ್ರಿಸದಸ್ಯ ಸಮಿತಿಗಳನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್, ವೆಬ್‌ಕಾಸ್ಟಿಂಗ್ ಹಾಗೂ ಸಿಸಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪರೀಕ್ಷಾರ್ಥಿಗಳಿಗೆ ಕಟ್ಟುನಿಟ್ಟಿನ ನಿಯಮ
ಅಭ್ಯರ್ಥಿಗಳು ನಿಗದಿತ ಸಮಯಕ್ಕೂ ಮುನ್ನ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಸ್ವಯಂ ತಪಾಸಣೆಯ ಬಳಿಕವೇ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡಲಾಗುತ್ತದೆ.
ಮೊಬೈಲ್, ಬ್ಲೂಟೂತ್, ಇಯರ್‌ಫೋನ್, ಸ್ಮಾರ್ಟ್‌ವಾಚ್, ಕ್ಯಾಮೆರಾ, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳಿಗೆ ಅವಕಾಶವಿಲ್ಲ. ಆಹಾರ ಪದಾರ್ಥ, ನೀರಿನ ಬಾಟಲಿ, ಪುಸ್ತಕ, ಚೀಟಿ, ಬ್ಯಾಗ್, ಪರ್ಸ್ ಸೇರಿದಂತೆ ಹಲವು ವಸ್ತುಗಳನ್ನೂ ಪರೀಕ್ಷಾ ಕೇಂದ್ರದೊಳಗೆ ತರಲು ನಿರ್ಬಂಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿರ್ಬಂಧ
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಬಿಎನ್‌ಎಸ್ ಸೆಕ್ಷನ್ 163 ಜಾರಿಗೊಳಿಸಲಾಗುತ್ತದೆ. ಈ ವ್ಯಾಪ್ತಿಯಲ್ಲಿ ಜನರು ಗುಂಪುಗೂಡುವುದು, ಅನಗತ್ಯ ಪ್ರವೇಶ ಹಾಗೂ ಸಭೆ-ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ. ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.
