ಶಿವಮೊಗ್ಗ : ಜನಸಾಮಾನ್ಯರ ದಿನನಿತ್ಯದ ಸಮಸ್ಯೆ–ಸವಾಲುಗಳು ಹಾಗೂ ದುಃಖ–ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾ ಸೇವೆ ಆಂದೋಲನ’ ಜಾರಿಗೆ ತರಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಶಿಕಾರಿಪುರದ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಮಸ್ಯೆಗಳ ಪರಿಹಾರಕ್ಕಾಗಿ ಜನರು ಕಚೇರಿಯಿಂದ ಕಚೇರಿಗೆ ಹಾಗೂ ಗ್ರಾಮೀಣ ಪ್ರದೇಶಗಳಿಂದ ಬೆಂಗಳೂರಿಗೆ ಅಲೆದಾಡುವ ಪರಿಸ್ಥಿತಿ ಎದುರಾಗಿರುವುದು ನೋವಿನ ಸಂಗತಿ. ಇದರಿಂದ ಜನರ ಸಮಯ ಹಾಗೂ ಹಣ ವ್ಯರ್ಥವಾಗುತ್ತಿದ್ದು, ಈ ಸಮಸ್ಯೆಯನ್ನು ತಪ್ಪಿಸುವ ಉದ್ದೇಶದಿಂದ ಪ್ರಜಾ ಸೇವೆ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕಾಳಜಿಯಿಂದ ರೂಪುಗೊಂಡಿರುವ ಈ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಲಿದ್ದಾರೆ ಎಂದು ತಿಳಿಸಿದರು.
ಪ್ರತಿ ತಿಂಗಳು ಎರಡು ಬಾರಿ ಪ್ರಜಾ ಸೇವೆ
ಜನರು ಅರ್ಜಿಗಳನ್ನು ಹಿಡಿದು ಕಚೇರಿಗಳ ಸುತ್ತಾಡುವುದನ್ನು ತಪ್ಪಿಸುವ ಉದ್ದೇಶದಿಂದ ಪ್ರತ್ಯೇಕ ವ್ಯವಸ್ಥೆ ರೂಪಿಸಲಾಗಿದೆ. ಜಿಲ್ಲಾಡಳಿತವು ಸಾರ್ವಜನಿಕರು ಹಾಗೂ ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ. ಅಧಿಕಾರಿಗಳು ಮಾನವೀಯ ನೆಲೆಯಲ್ಲಿ, ಕಾನೂನುಬದ್ಧವಾಗಿ ಹಾಗೂ ಪಕ್ಷಾತೀತವಾಗಿ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಸಚಿವರು ಸೂಚಿಸಿದರು.
ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲೂ ‘ಪ್ರಜಾ ಸೇವೆ’ ಆಂದೋಲನ ಕಾರ್ಯಕ್ರಮ ನಡೆಸಲಾಗುವುದು. ಅಧಿಕಾರಿಗಳು ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ಮಾತ್ರ ಸೀಮಿತವಾಗದೆ, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಬರದ ಛಾಯೆ: ರಾಘವೇಂದ್ರ
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲೆಯಲ್ಲಿ ಬರದ ಛಾಯೆ ಕಾಣಿಸುತ್ತಿದ್ದು, ಜನ–ಜಾನುವಾರುಗಳ ರಕ್ಷಣೆ ಹಾಗೂ ಜಲ ಮತ್ತು ವಿದ್ಯುತ್ ಸಮಸ್ಯೆ ಎದುರಾಗದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿದರು.

ಏತ ನೀರಾವರಿ ಮೂಲಕ ಗ್ರಾಮೀಣ ಕೆರೆಗಳನ್ನು ತುಂಬಿಸಲಾಗುತ್ತಿದೆ. ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಶೇ.50ರಷ್ಟಾದರೂ ಕೆರೆಗಳನ್ನು ತುಂಬಿಸಲು ಅಧಿಕಾರಿಗಳು ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಸರ್ಕಾರದ ಯೋಜನೆಗಳು ಕಾಲಮಿತಿಯಲ್ಲಿ ಪೂರ್ಣಗೊಳ್ಳಲು ಇಲಾಖೆಗಳ ನಡುವೆ ಸಮನ್ವಯ ಅಗತ್ಯ. ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ತಲುಪುವಂತೆ ಅಧಿಕಾರಿಗಳು ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ನಗರದ ಮಹದೇವಪ್ಪ, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಗೌಡ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಉಪವಿಭಾಗಾಧಿಕಾರಿಗಳಾದ ವಿರೇಶ್ ಹಾಗೂ ಡಾ. ಮೈತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
