ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಒತ್ತಾಯಿಸಿ ಬೃಹತ್ ಹೋರಾಟ ರೂಪಿಸಲು ಜಿಲ್ಲಾ ವಕೀಲರ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಹೈಕೋರ್ಟ್ ವಕೀಲರು ಹಾಗೂ ಶಿವಮೊಗ್ಗ ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಶನಿವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಂಚಾರಿ ಪೀಠ ಹೋರಾಟ ಸಮಿತಿ ಅಧ್ಯಕ್ಷ ಕೆ. ಬಸಪ್ಪಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಹೈಕೋರ್ಟ್‌ನ ವಕೀಲರು, ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವ ಕುರಿತು ಚರ್ಚಿಸಿದರು. ಅಲ್ಲದೆ, ಬೆಂಗಳೂರಿನ ವಿಧಾನಸೌಧದ ಎದುರು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಮತ್ತೆ ಹೋರಾಟ ಆರಂಭ:
ಸಂಚಾರಿ ಪೀಠ ಸ್ಥಾಪನೆಗೆ ಒತ್ತಾಯಿಸಿ ಈಗಾಗಲೇ ಶಿವಮೊಗ್ಗದಲ್ಲಿ ಹಲವು ದಿನಗಳ ಕಾಲ ನಿರಂತರ ಪ್ರತಿಭಟನೆ ನಡೆಸಲಾಗಿದೆ. ಇದೀಗ ಮತ್ತೊಮ್ಮೆ ಹೋರಾಟ ಆರಂಭಿಸಲಾಗುವುದು ಎಂದು ಹೋರಾಟ ಸಮಿತಿ ಅಧ್ಯಕ್ಷ ಕೆ. ಬಸಪ್ಪಗೌಡ ತಿಳಿಸಿದರು.
ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಪ್ರಮುಖರನ್ನು ಒಗ್ಗೂಡಿಸಿಕೊಂಡು ಹೋರಾಟ ಮುಂದುವರಿಸುವುದಾಗಿ ಹೇಳಿದರು.
ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಮಾತನಾಡಿ, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು. ಶಿವಮೊಗ್ಗ ನಗರ ಬಂದ್‌ಗೆ ಕರೆ ನೀಡುವುದರ ಜೊತೆಗೆ ಚಿತ್ರದುರ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವಕೀಲರ ಸಂಘಟನೆಗಳ ಪ್ರಮುಖರ ಬೆಂಬಲ ಪಡೆದು ರಾಜಧಾನಿಯವರೆಗೆ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಬೇಕು ಎಂದು ಹೇಳಿದರು.
ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ಮಧ್ಯ ಕರ್ನಾಟಕ ಭಾಗದ ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠದ ಅಗತ್ಯವಿದೆ. ಸಂಚಾರಿ ಪೀಠದಿಂದ ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಆಗುವ ಅನುಕೂಲಗಳನ್ನು ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು. ಪೀಠ ಸ್ಥಾಪನೆಗಾಗಿ ನಡೆಯುವ ಎಲ್ಲ ಹೋರಾಟಗಳಿಗೆ ನೌಕರರ ಸಂಘ ಬೆಂಬಲ ನೀಡಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಹೈಕೋರ್ಟ್ ನ್ಯಾಯವಾದಿಗಳಾದ ಕೆ. ದಿವಾಕರ್, ಶ್ರೀರಂಗ, ಚಾಮರಾಜ್, ಸಿ.ಎನ್. ಹರೀಶ್, ಎಸ್.ವಿ. ಪ್ರಕಾಶ್, ಪೃಥ್ವಿ ಒಡೆಯರ್, ಚಂದ್ರಶೇಖರ್ ಪಾಟೀಲ್, ಅನಿಲ್, ಹೋರಾಟ ಸಮಿತಿ ಕಾರ್ಯದರ್ಶಿ ಕೆ.ಪಿ. ಶ್ರೀಪಾಲ್, ರೈತಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ, ಡಿಎಸ್‌ಎಸ್‌ನ ಎಂ. ಗುರುಮೂರ್ತಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಜಿ.ಆರ್., ಕಾರ್ಯದರ್ಶಿ ಕಾಂತ್‌ರಾಜ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
