ಶಿವಮೊಗ್ಗ : ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳು ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಂಡು ಬೆಳೆದಾಗ ಜೀವನದಲ್ಲಿ ಯಶಸ್ಸು ಹಾಗೂ ಸಾಧನೆ ಮಾಡಲು ಸಾಧ್ಯ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿವಮೊಗ್ಗ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ 17 ವರ್ಷದೊಳಗಿನ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳು ವಿವಿಧ ಗುಂಪು ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡುವ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ. ವಿದ್ಯಾರ್ಥಿಗಳು ಆಸಕ್ತಿ ಹಾಗೂ ಆತ್ಮವಿಶ್ವಾಸದಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಎದುರಾದಾಗ ನಿರಾಶರಾಗದೆ, ಮುಂದಿನ ಅವಕಾಶದಲ್ಲಿ ಗೆಲುವು ಸಾಧಿಸಲು ನಿರಂತರ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ವಹಿಸಿದ್ದರು. ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಕೆ.ಎಸ್. ಸವಿತಾ, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ಸಹಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ತಾಲೂಕು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಂ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗಪ್ಪ, ತುಂಗಾತರಂಗ ದಿನಪತ್ರಿಕೆಯ ಸಂಪಾದಕ ಎಸ್.ಕೆ. ಗಜೇಂದ್ರ ಸ್ವಾಮಿ, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ನಿರಂಜನ್ ಮೂರ್ತಿ, ಅನುದಾನರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಗಿರೀಶ್, ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಟಿ. ನಾಗರಾಜ್, ಅನುದಾನರಹಿತ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾ.ಹ. ತಿಮ್ಮೇನಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ರೂವಾರಿ ಹಾಗೂ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಾಳಾನಾಯ್ಕ್ ಎಸ್. ಸ್ವಾಗತಿಸಿದರು. ನಂದಿನಿ ಪ್ರಾರ್ಥಿಸಿದರು. ಖಜಾಂಚಿ ರುದ್ರಪ್ಪ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಮಹೇಶ್ ಉಲ್ಲತ್ತಿ ವಂದಿಸಿದರು.
ಶಾಲೆಯ ಕ್ರೀಡಾ ಅವಧಿ ಸದ್ಬಳಕೆಗೆ ಬಿಇಒ ರಮೇಶ್ ಕರೆ
ಶಾಲೆಗಳಲ್ಲಿ ಪಾಠದ ಅವಧಿಯಂತೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೂ ಸಮಯ ಮೀಸಲಿರಿಸಲಾಗಿದೆ. ವಿದ್ಯಾರ್ಥಿಗಳು ಈ ಅವಧಿಯನ್ನು ಸದುಪಯೋಗಪಡಿಸಿಕೊಂಡು ತಮ್ಮ ಪ್ರತಿಭೆಯನ್ನು ಗುರುತಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದು ಬಿಇಒ ರಮೇಶ್ ಕರೆ ನೀಡಿದರು.
ಪಠ್ಯ ಕಲಿಕೆಯಲ್ಲಿ ತೋರುವ ಆಸಕ್ತಿಯಂತೆಯೇ ಕ್ರೀಡೆಗೂ ಮಹತ್ವ ನೀಡಿ ಅಭ್ಯಾಸ ಮಾಡಬೇಕು. ಕ್ರೀಡೆಯು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುವುದರ ಜೊತೆಗೆ ಮುಂದಿನ ಸಾಧನೆಗೆ ಮಾರ್ಗದರ್ಶನ ನೀಡುತ್ತದೆ ಎಂದು ಅವರು ಹೇಳಿದರು.
