ಶಿವಮೊಗ್ಗ: ಶಿವಮೊಗ್ಗ ದಸರಾ ಮಹೋತ್ಸವವನ್ನು ಈ ಬಾರಿ ವೈವಿಧ್ಯಮಯ ಹಾಗೂ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ನಗರದ ಅಲ್ಲಮಪ್ರಭು ಮೈದಾನದಲ್ಲಿ ದಸರಾ ಮಹೋತ್ಸವದ ಪ್ರಮುಖ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಿರ್ಮಿಸಲಾಗುತ್ತಿರುವ ದಸರಾ ವೇದಿಕೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾರ್ವಜನಿಕರು ಆರಾಮದಾಯಕವಾಗಿ ವೀಕ್ಷಿಸಲು ಅನುಕೂಲವಾಗುವಂತೆ ವೇದಿಕೆ, ವಿಶಾಲ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ, ದಸರಾ ಕಾರ್ಯಕ್ರಮಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಭಾಕರ್ ಪಿ. ಸೇರಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
