ಜನ ನೋಟ
ಶಿವಮೊಗ್ಗ

ಶಿವಮೊಗ್ಗ : ಎಸ್‌ಐಆರ್ ಅಕ್ರಮ ಖಂಡಿಸಿ ಕಪ್ಪು ಬಾವುಟ ಪ್ರದರ್ಶನ : ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ

ಶಿವಮೊಗ್ಗ : ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಅಕ್ರಮ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ನಗರಕ್ಕೆ ಆಗಮಿಸಿದ್ದ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ನಗರದ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಸಚಿವರು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮಾರ್ಗವಾಗಿ ನಗರ ಪ್ರವೇಶಿಸುತ್ತಿದ್ದ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಕಾರನ್ನು ಅಡ್ಡಗಟ್ಟಿದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ಪದಾಧಿಕಾರಿಗಳಾದ ಚರಣ್ ಶೆಟ್ಟಿ, ಗಿರೀಶ್, ಮೊಹಮ್ಮದ್ ಸಕ್ಲೆನ್, ಶಿವರಾಜ್, ಮಲವಗೊಪ್ಪ ಆಕಾಶ್, ಬಾಲಾಜಿ ಶೆಟ್ಟಿ, ನಿಖಿಲ್, ವಿಷ್ಣು ಕುಮಾರ್, ಮಹಮ್ಮದ್ ತೌಸಿಫ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Related posts

ಭದ್ರಾವತಿ : ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

JanaNota Editor

ಶೋಷಿತರ ಬದುಕಿಗೆ ಬೆಳಕಾದ ಡಿ. ದೇವರಾಜ ಅರಸು

JanaNota Editor

ಕಸ್ತೂರಿ ರಂಗನ್ ವರದಿ: ಜನವಸತಿ, ಕೃಷಿ ಭೂಮಿ ಹೊರಗಿಡಲು ಸರ್ಕಾರಕ್ಕೆ ಮನವಿ

JanaNota Editor