ಜನ ನೋಟ
ಶಿವಮೊಗ್ಗ

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಶಿವಮೊಗ್ಗದಲ್ಲಿ ಪ್ರತಿಭಟನೆ : SIR ರದ್ದತಿಗೆ ಒತ್ತಾಯ

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಎಸ್‌ಐಆರ್ ವಿರೋಧಿ ಒಕ್ಕೂಟ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ ಹಾಗೂ ಯಾವುದೇ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗದ ರೀತಿಯಲ್ಲಿ ನಡೆಯಬೇಕು. ಆದರೆ ಪ್ರಸ್ತುತ ನಡೆಯುತ್ತಿರುವ ಪರಿಷ್ಕರಣೆ ಪ್ರಕ್ರಿಯೆಯಿಂದ ಹಲವು ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಆತಂಕವಿದೆ ಎಂದು ಸಂಘಟನೆಗಳು ಮನವಿಯಲ್ಲಿ ತಿಳಿಸಿವೆ.

ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಪ್ರಮುಖ ಸಂಸ್ಥೆಯಾಗಿದ್ದು, ಅದರ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಮತ್ತು ನಿಷ್ಪಕ್ಷಪಾತತೆ ಕಾಪಾಡಬೇಕು. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಸಂದರ್ಭದಲ್ಲಿ ಸೂಕ್ತ ಪರಿಶೀಲನೆ ಹಾಗೂ ಆಕ್ಷೇಪಣೆ ಸಲ್ಲಿಸಲು ಅಗತ್ಯ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸಂಘಟನೆಗಳು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿವೆ. ಚುನಾವಣಾ ಆಯೋಗದ ನಿರ್ಧಾರಗಳಲ್ಲಿ ಪಾರದರ್ಶಕತೆ ಮತ್ತು ಸರ್ವಸಮ್ಮತ ಪ್ರಕ್ರಿಯೆ ಇರಬೇಕು ಎಂದು ಆಗ್ರಹಿಸಿವೆ.

SIR ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸುವುದು, ಪಟ್ಟಿಯಿಂದ ಹೊರಗುಳಿದಿರುವ ಮತದಾರರ ಕುರಿತು ಸ್ವತಂತ್ರ ಪರಿಶೀಲನೆ ನಡೆಸುವುದು, ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಚುನಾವಣಾ ಆಯೋಗದ ಮೇಲಿನ ಜನರ ವಿಶ್ವಾಸವನ್ನು ಕಾಪಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮನವಿಯಲ್ಲಿ ಮಂಡಿಸಲಾಗಿದೆ.

ಈ ಸಂದರ್ಭದಲ್ಲಿ ವಕೀಲ ಕೆ.ಪಿ. ಶ್ರೀಪಾಲ, ಡಿಎಸ್‌ಎಸ್‌ನ ಎಂ. ಗುರುಮೂರ್ತಿ, ರೈತ ಸಂಘದ ರಾಘವೇಂದ್ರ, ವಿಜಯ್ ಕುಮಾರ್, ಮೊಹಮದ್ ರಫೀಕ್, ಹನುಮಕ್ಕ, ಸಾಹಿತಿ ಅಕ್ಷತಾ ಅವಿನಾಶ್, ಸುರೇಶ್ ಅರಸಾಳು, ರವಿ ಹರಿಗೆ, ಮಂಜುನಾಥ್ ನವುಲೆ, ನಟರಾಜ್, ಏಳುಕೋಟಿ, ಭಾಸ್ಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related posts

ಕಸ್ತೂರಿರಂಗನ್ ವರದಿ ವಿರೋಧಿಸಿ ಸಾಗರದಲ್ಲಿ ಪಾದಯಾತ್ರೆ

JanaNota Editor

ಮಧ್ಯ ಕರ್ನಾಟಕಕ್ಕೆ ಸಂಚಾರಿ ಪೀಠ: ಶಿವಮೊಗ್ಗದಲ್ಲೇ ಸ್ಥಾಪನೆಗೆ ಆಗ್ರಹ

JanaNota Editor

ಅರಣ್ಯ ಸಂಚಾರಿದಳ ದಿಢೀರ್ ದಾಳಿ : 21 ಕೆ.ಜಿ ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

JanaNota Editor